ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಕೋಟಾ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ

12:14 PM Jul 17, 2024 IST | Bcsuddi
Advertisement

ಬೆಂಗಳೂರು: ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇಕಡಾ 100ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದಿ ಕರ್ನಾಟಕ ಸ್ಟೇಟ್ ಎಂಪ್ಲಾಯ್​​ಮೆಂಟ್ ಆಫ್ ಲೋಕಲ್ ಕ್ಯಾಡಿಡೇಟ್ಸ್ ಇನ್ ದಿ ಇಂಡಸ್ಟ್ರೀಸ್, ಫ್ಯಾಕ್ಟರೀಸ್ ಆ್ಯಂಡ್ ಲೋಕಲ್ ಎಷ್ಟಾಬ್ಲಿಷ್‌ಮೆಂಟ್ ಬಿಲ್-2024 ವಿಧೇಯಕದಂತೆ ಮ್ಯಾನೇಜ್‌ಮೆಂಟ್ ಹುದ್ದೆಗಳು ಶೇ.50 ಹಾಗೂ ನಾನ್ ಮ್ಯಾನೇಜ್‌ಮೆಂಟ್ ಶೇ.75ರಷ್ಟು ಹುದ್ದೆಗಳು ಸ್ಥಳೀಯರಿಗೆ ಮೀಸಲಿಡಲಾಗುತ್ತದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, 'ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ "ಸಿ ಮತ್ತು ಡಿ" ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ' ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿಯೇ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಬರುವವರು, ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಪಾಸಾದವರನ್ನು ಸ್ಥಳೀಯರು ಎಂದು ಪರಿಗಣಿಸಲಾಗುವುದು. ಮ್ಯಾನೇಜ್‌ಮೆಂಟ್​​ನಲ್ಲಿ ಸೂಪರ್‌ವೈಸರ್, ಮ್ಯಾನೇಜಿರಿಯಲ್, ಟೆಕ್ನಿಕಲ್, ಆಪರೇಷನಲ್, ಆಡಳಿತ ಸೇರಿ ಉನ್ನತ ಹುದ್ದೆಗಳಲ್ಲಿ ಶೇ.50 ಉದ್ಯೋಗ ಸ್ಥಳೀಯರಿಗೆ ಮೀಸಲಿಡಲಾಗುವುದು. ಇನ್ನು ನಾನ್-ಮ್ಯಾನೇಜ್‌ಮೆಂಟ್​​ನಲ್ಲಿ ಕ್ಲರ್ಕ್‌ಗಳು, ಕೌಶಲ, ಕೌಶಲ ರಹಿತ ಹಾಗೂ ಅರೆಕೌಶಲ, ಗುತ್ತಿಗೆ ನೌಕರ ಹಾಗೂ ಐಟಿ ಹುದ್ದೆಗಳಲ್ಲಿ ಶೇ.75 ಮೀಸಲು ಸ್ಥಳೀಯರಿಗೆ ನೀಡುವ ವಿಧೇಯಕ ಇದಾಗಿದೆ. ಉದ್ಯೋಗ ನೀಡದಿದ್ದರೆ ದಂಡ: ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ದಂಡ ವಿಧಿಸುವ ಅಂಶವನ್ನೂ ವಿಧೇಯಕದಲ್ಲಿ ಸೇರಿಸಲಾಗಿದೆ. ಕನಿಷ್ಠ 10 ಸಾವಿರ ರೂ. ಹಾಗೂ 25 ಸಾವಿರ ರೂಪಾಯಿಗಳವರೆಗೆ ದಂಡ ವಿಸ್ತರಣೆ ಮಾಡಲು ಅವಕಾಶ ನೀಡಲಾಗುತ್ತದೆ. ಆ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂಪಾಯಿ ದಂಡ ವಿಧಿಸಲಾಗುತ್ತದೆ.

Advertisement

Advertisement
Next Article