ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ- ಸಿಎಂ ಕೇಂದ್ರದ ವಿರುದ್ಧ ಕಿಡಿ

09:27 AM Jan 10, 2024 IST | Bcsuddi
Advertisement

ಬೆಂಗಳೂರು: ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಕರ್ನಾಟಕ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ, ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಕೇಂದ್ರ ಸರ್ಕಾರ ಮುಂದುವರೆಸಿದೆ ಎಂದು ಕಿಡಿಕಾರಿದರು.

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ ಒಳಗೊಂಡಂತೆ ಸುಮಾರು 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು.

ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದರು.

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು.ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದರು.

Advertisement
Next Article