ಪ್ರಜ್ವಲ್ ಪಾಸ್‌ಪೋರ್ಟ್ ರದ್ದತಿ ಕುರಿತು ಜೂ.2ರ ಬಳಿಕ ಸೂಕ್ತ ಕ್ರಮ: ವಿದೇಶಾಂಗ ಸಚಿವಾಲಯ
ನವದೆಹಲಿ: ಲೈಂಗಿಕ ದೌರ್ಜನ್ಯದ ಪ್ರಕರಣದ ಆರೋಪಿಯಾಗಿ ಇದೀಗ ಪೊಲೀಸರ ವಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಸಂಬಂಧಿಸಿ ಶೋಕಾಸ್ ನೋಟಿಸ್ ನ ಗಡುವು ಮುಗಿದ ಬಳಿಕ ಅಂದರೆ ಜೂನ್ 2ರ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ಅವರು, ಪಾಸ್‌ಪೋರ್ಟ್ ರದ್ಧತಿ ವಿಚಾರವಾಗಿ ಮೇ 21ರಂದು ಕರ್ನಾಟಕ ಸರ್ಕಾರ ಮನವಿ ಸಲ್ಲಿಸಿತ್ತು. ಭಾರತೀಯ ಪಾಸ್‌ಪೋರ್ಟ್ ಕಾಯ್ದೆ ಅನುಸಾರ, ಸಂಸದ ಪ್ರಜ್ವಲ್ ಅವರ ಪಾಸ್‌ಪೋರ್ಟ್ ರದ್ದತಿಗೆ ಸಂಬಂಧಿಸಿದ ಪ್ರಕ್ರಿಯೆಗೆ ಮೇ 23ರಂದು ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
10 ದಿನಗಳ ಒಳಗಾಗಿ ಶೋಕಾಸ್ ನೋಟಿಸ್‌ಗೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಅವರ ಪ್ರತಿಕ್ರಿಯೆ ಸ್ವೀಕರಿಸಿದ ಬಳಿಕ ಇಲ್ಲವೇ 10 ದಿನಗಳ ಗಡುವು ಮುಗಿದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಸಚಿವಾಲಯವು ಮೇ 23ರಂದು ಪ್ರಜ್ವಲ್ ರೇವಣ್ಣ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಈ ನೋಟೀಸ್‌ನಲ್ಲಿ ನಿಮ್ಮ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳಿದ್ದು, ಕರ್ನಾಟಕ ಸರ್ಕಾರದ ಮನವಿಯಂತೆ ನಿಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಬಾರದೇಕೆ ಎಂದು ಪ್ರಶ್ನಿಸಿದೆ.