ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಸಿಎಂ ರಾಜೀನಾಮೆ ಕೊಡುವವರೆಗೆ ಹೋರಾಟ'- ಬಿ.ವೈ.ವಿಜಯೇಂದ್ರ

04:06 PM Jul 18, 2024 IST | Bcsuddi
Advertisement

ಬೆಂಗಳೂರು :ಪರಿಶಿಷ್ಟ ಜಾತಿ, ಪಂಗಡಗಳ ಹಣಕ್ಕೆ ಕನ್ನ ಹಾಕಿದ್ದು ಗೊತ್ತಾದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಇಂದು ಸ್ವಾತಂತ್ರ್ಯ ಉದ್ಯಾನವನದ ಬಳಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಸಿಬಿಐ ತನಿಖೆಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆಯಿತು.

ದೊಡ್ಡ ದೊಡ್ಡವರು ಹೇಳಿದ್ದಕ್ಕೆ ಹಣ ದುರುಪಯೋಗ ಎಂಬ ಮಾಹಿತಿಯನ್ನು ಇ.ಡಿ. ಕಸ್ಟಡಿಯಲ್ಲಿರುವ ನಾಗೇಂದ್ರ ಹೇಳಿದ್ದಾಗಿ ಮಾಹಿತಿ ಇದೆ. ಯಾವತ್ತು ಸರಕಾರ ಬೀಳುತ್ತೋ ಗೊತ್ತಿಲ್ಲ ಎಂಬ ಆತಂಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸಚಿವರನ್ನು ಕಾಡುತ್ತಿದೆ. ಅವರಿಗೆ ಈಗ ನಿದ್ರೆ ಬರುತ್ತಿಲ್ಲ ಎಂದು ತಿಳಿಸಿದರು.

ಇ.ಡಿ. ಕಸ್ಟಡಿಯಲ್ಲಿರುವ ನಾಗೇಂದ್ರ ಎಲ್ಲಿ ತಮ್ಮ ಹೆಸರು ಹೇಳುವರೋ ಎಂಬ ಭಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳನ್ನು ಕಾಡುತ್ತಿದೆ. ಒಂದೆಡೆ ಎಸ್‍ಇಪಿ, ಟಿಎಸ್‍ಪಿ ಹಣವನ್ನು ಬೇರೆಡೆ ವರ್ಗಾವಣೆ ಮಾಡಿದ್ದಾರೆ. ಪರಿಶಿಷ್ಟರ ಅಭಿವೃದ್ಧಿಗೆ ಇಟ್ಟಿದ್ದ ಹಣ ವರ್ಗಾವಣೆ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿಯಾಗಿದೆ. ಮೈಸೂರಿನ ಸಾವಿರಾರು ಕೋಟಿ ಮೊತ್ತದ ಮುಡಾ ಹಗರಣದ ಮೂಲಕ ಸಿದ್ದರಾಮಯ್ಯನವರ ಬಂಡವಾಳ ಬಯಲಾಗಿದೆ ಎಂದು ಟೀಕಿಸಿದರು.

ಬಡವರಿಗೆ ಕೊಡಬೇಕಾದ ನಿವೇಶನಗಳ ಪೈಕಿ 14 ನಿವೇಶನಗಳನ್ನು ತಮ್ಮ ಕುಟುಂಬಕ್ಕೆ ಕೊಡಿಸಿ ಲೂಟಿ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

ಯೋಗ್ಯತೆ, ನೈತಿಕತೆ ಇಲ್ಲ...
ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವ ಯೋಗ್ಯತೆ, ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಪರಿಶಿಷ್ಟ ಜಾತಿ, ಜನಾಂಗದವರ ಶಾಪ ನಿಮಗೆ ತಟ್ಟದೇ ಬಿಡುವುದಿಲ್ಲ. ಬಿಜೆಪಿ ರಾಜಕೀಯ ಮಾಡಲು ಬಂದಿಲ್ಲ; ನಮ್ಮ ಕರ್ತವ್ಯವನ್ನು ನಾವು ಈಡೇರಿಸುತ್ತಿದ್ದೇವೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ಪೊಲೀಸರಿಗೆ ಹೆದರುವ ಪ್ರಶ್ನೆಯೇ ಇಲ್ಲ. ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಮುಖ್ಯಮಂತ್ರಿಗಳು ವಿಧಾನಸೌಧದಿಂದ ಓಡಿ ಹೋಗುವಂಥ ಪರಿಸ್ಥಿತಿ ನಿರ್ಮಾಣ ಮಾಡಬೇಕಿದೆ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ನೇತೃತ್ವದಲ್ಲಿ ಘೋಷಣೆ ಕೂಗಲಾಯಿತು. 25 ಸಾವಿರ ಕೋಟಿ ಲೂಟಿ ಹಣ ವಾಪಸ್ ಕೊಡಿ, ವಿಧಾನಸೌಧದ ಗದ್ದುಗೆದಾರರೇ ಕಿವಿಯ ಕೊಡಿ, ಕಣ್ಣು ಬಿಡಿ ಎಂಬಿತ್ಯಾದಿ ಘೋಷಣೆ ಕೂಗಿದರು.

ನೂಕಾಟ, ತಳ್ಳಾಟದ ಬಳಿಕ ಬಂಧನ

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಮುಖರು ಮತ್ತು ಕಾರ್ಯಕರ್ತರು ಮುನ್ನುಗ್ಗಿದಾಗ ಪೊಲೀಸರು ತಡೆಬೇಲಿ ಹಾಕಿ ತಡೆಯಲು ಮುಂದಾದರು. ಈ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆಯಿತು. ಬಳಿಕ ಎಲ್ಲರನ್ನೂ ಬಂಧಿಸಲಾಯಿತು.ಕಾರ್ಯಕರ್ತರು ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಕೂಗಿದರು.ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ ಮತ್ತು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Advertisement
Next Article